ಕಾಂಗ್ರೆಸ್‌ನವರು ಮುಡಾ ಚಲೋ ನಡೆಸಲಿ

0
20

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದವರು ರಾಜಭವನ ಚಲೋ ಅಲ್ಲ, ಮುಡಾ ಚಲೋ ನಡೆಸಲಿ. ಮುಡಾಕ್ಕೆ ತೆರಳಿ ನಿವೇಶನ ತೆಗೆದುಕೊಂಡದ್ದು, ಆಪ್ತರಿಗೆ ಕೊಡಿಸಿದ್ದು ತಪ್ಪಾಯಿತು ಎಂದು ಮುಡಾಕ್ಕೆ ಕೈ ಮುಗಿದು ಕ್ಷಮೆ ಕೇಳಿ ಬರಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ ಮಾಡಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್‌ನವರು ರಾಜಭವನ ಚಲೋ ಏಕೆ ಮಾಡುತ್ತಾರೆ? ತಪ್ಪಿಗೆ ಕ್ಷಮೆ ಕೇಳಲು ಮುಡಾ ಚಲೋ ಮಾಡಲಿ ಎಂದರು.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೆ ಏಕೆ ಹೆದರುತ್ತಾರೆ? ಅರ್ಥವಾಗುತ್ತಿಲ್ಲ. ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರ ಮೇಲೂ ಖಾಸಗಿ ದೂರಿನ ಮೇರೆಗೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದರು. ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿಲ್ಲವೇ? ಬಿಎಸ್‌ವೈ ಶುದ್ಧ ಹಸ್ತರಾಗಿ ಬಂದ ಮೇಲೆ ಸಿದ್ದರಾಮಯ್ಯ ಕ್ಷಮೆ ಕೇಳಿದ್ರೆ ಎಂದು ಜೋಶಿ ಪ್ರಶ್ನಿಸಿದರು. ಮುಡಾ ಹಗರಣದಲ್ಲಿ ಖಾಸಗಿಯವರು ದೂರು ನೀಡಿದ್ದರಿಂದ ಈಗ ರಾಜ್ಯಪಾಲರು ತನಿಖೆಗೆ ಅನುಮತಿ ಕೊಟ್ಟಿದ್ದಾರೆ. ಬಿಎಸ್‌ವೈ ಪ್ರಕರಣಕ್ಕೂ, ಸಿದ್ದರಾಮಯ್ಯ ಪ್ರಕರಣಕ್ಕೂ ವ್ಯತ್ಯಾಸವೇನಿಲ್ಲ. ಸಿಎಂ ಮೊದಲು ತನಿಖೆ ಎದುರಿಸಲಿ. ಮುಡಾ ಹಗರಣದಲ್ಲಿ ತನಿಖೆಗೆ ಅನುಮತಿ ನೀಡಿದ ಕಾರಣಕ್ಕೆ ರಾಜಭವನ ಚಲೋ ಮೂಲಕ ರಾಜ್ಯಪಾಲರನ್ನ ಬೆದರಿಸುವ, ಹೆದರಿಸುವ ತಂತ್ರ ಅನುಸರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಡೆಯನ್ನು ಖಂಡಿಸಿದರು.
ಮುಖ್ಯಮಂತ್ರಿ ಭ್ರಷ್ಟಾಚಾರದಲ್ಲಿ ತೊಡಗಿಲ್ಲ, ಮುಡಾ ಹಗರಣದಲ್ಲಿ ತಪ್ಪು ಮಾಡಿಲ್ಲ ಎಂದ ಮೇಲೆ ರಾಜ್ಯಪಾಲರನ್ನು ಬೆದರಿಸುವಂತಹ ರಾಜಭವನ ಚಲೋ ದಂತಹ ಡ್ರಾಮಾ ಏಕೆ ಮಾಡುತ್ತಿದ್ದಾರೆ. ಮುಡಾ ಭ್ರಷ್ಟಾಚಾರದಲ್ಲಿ ಸಹಾಯ ಮಾಡಿದ ಅಧಿಕಾರಿಗೆ ರಜಿಸ್ಟ್ರಾರ್ ಆಗಿ ಪ್ರಮೋಶನ್ ಮಾಡಿದ್ದೀರಿ. ಅದೇ ತಪ್ಪು ನಡೆದಿದೆ ಎಂದು ಪತ್ರ ಬರೆದ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿದ್ದೀರಿ. ಈಗ ತನಿಖೆಗೆ ಅನುಮತಿ ನೀಡಿದರೆಂದು ರಾಜ್ಯಪಾಲರಿಗೆ ಬೆದರಿಕೆ ಹಾಕುತ್ತಿದ್ದೀರಿ ಎಂದು ಸಿಎಂ, ಡಿಸಿಎಂ ವಿರುದ್ಧ ಜೋಶಿ ಹರಿಹಾಯ್ದರು.

Previous articleದರ್ಶನ್ ಭೇಟಿಗೆ ಬಂದ ವಿಜಯಲಕ್ಷ್ಮೀ
Next articleಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ. 2ಕ್ಕೆ ಮುಂದೂಡಿಕೆ