ಬಿಎಸ್‌ವೈಗೆ ಗೌರವ ಡಾಕ್ಟರೇಟ್ ಪ್ರದಾನ

ಶಿವಮೊಗ್ಗ: ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಮಾಜಿ ಸಿಎಂ ಬಿ. ಎಸ್.‌ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಯಿತು. ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾಜಿ ಸಿಎಂ ಬಿಎಸ್‌ವೈ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಗೌರವ ಡಾಕ್ಟರೇಟ್ ಸ್ವೀಕರಿಸಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿರುವ ಬಿಎಸ್‌ವೈ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಇಂದು ನೀಡಿದ ಗೌರವ ಡಾಕ್ಟರೇಟ್ ಸನ್ಮಾನ, ವಿಶೇಷವಾಗಿ ನಮ್ಮ ಅನ್ನದಾತ ರೈತರ ಹಕ್ಕು ಹಾಗೂ ಹಿತರಕ್ಷಣೆ ನಿಟ್ಟಿನಲ್ಲಿ ನನ್ನ ಪ್ರಾಮಾಣಿಕ ಪ್ರಯತ್ನಗಳಿಗೆ ಸಂದ ಮನ್ನಣೆಯಾಗಿದೆ ಎಂದು ನಾನು ಭಾವಿಸುತ್ತೇನೆ. ನಮ್ಮ ರೈತರು ನೆಮ್ಮದಿಯಿಂದ ಬದುಕುವಂತಾಗುವ ನಿಟ್ಟಿನಲ್ಲಿ ಮತ್ತಷ್ಟು ಪ್ರಯತ್ನಿಸಲು ಈ ಗೌರವ ಪ್ರೇರಣೆ ನೀಡುತ್ತಿದೆ. ಈ ವಿಶಿಷ್ಟ ಗೌರವಕ್ಕಾಗಿ ಮತ್ತೊಮ್ಮೆ ರಾಜ್ಯಪಾಲರಿಗೆ ಮತ್ತು ಕೃಷಿ ವಿಶ್ವವಿದ್ಯಾಲಯಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.