ಮಂಡ್ಯ: ಜಿಲ್ಲೆಯ 32 ಶಾಲೆಗಳು 100ರಷ್ಟು ಫಲಿತಾಂಶ ಪಡೆದುಕೊಂಡಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು.
ಇಲ್ಲಿನ ಮೊರಾರ್ಜಿ ದೇಸಾಯಿ ಶಾಲೆಯ ನವನೀತ್ ಎಂಬ ವಿದ್ಯಾರ್ಥಿ 625 ಅಂಕಗಳಿಗೆ 623 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಹಾಗೂ ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿರುವುದು ಇತರೆ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾನೆ. ನವನೀತ್ ಅವರ ತಂದೆ-ತಾಯಿ ಕೃಷಿಕರಾಗಿದ್ದು, ರೈತರ ಮಕ್ಕಳು ಸಹ ಉನ್ನತ ಸಾಧನೆ ಮಾಡಬಹುದು ಎಂದು ತೋರಿಸಿಕೊಟ್ಟಿದ್ದಾರೆ ಎಂದರು.
ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಅವರು, ಅನುತೀರ್ಣರಾದ ವಿದ್ಯಾರ್ಥಿಗಳು ಆತ್ಮಸ್ಥೈರ್ಯ ಕಳೆದುಕೊಳ್ಳದೇ ಮತ್ತೆ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳಬೇಕು. ಜೂನ್ 7ರಿಂದ ಎರಡನೇ ಪರೀಕ್ಷೆ ನಡೆಯಲಿದ್ದು, ಇದಕ್ಕೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲಾಗುವುದು ಎಂದರು.