ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆಯಲಿರುವ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಅನುಭವಿ ವೇಗಿ ಮೊಹಮ್ಮದ್ ಸಿರಾಜ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಗಾಯಗೊಂಡು ತಂಡದಿಂದ ಹೊರಗುಳಿದಿದ್ದ ಶ್ರೇಯಸ್ ಅಯ್ಯರ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಸರಣಿ ಆರಂಭಕ್ಕೂ ಮುನ್ನ ಸೆಂಟರ್ ಆಫ್ ಎಕ್ಸಲೆನ್ಸ್‌ನಿಂದ ಪಿಟ್ನೆಸ್ ಪ್ರಮಾಣ ಪತ್ರ ಪಡೆಯಬೇಕಿದೆ.
ಜನವರಿ 11ರಿಂದ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಬಿಸಿಸಿಐ 15 ಆಟಗಾರರನ್ನೊಳಗೊಂಡ ಭಾರತ ತಂಡವನ್ನು ಪ್ರಕಟಿಸಿದೆ. ವೇಗಿ ಮೊಹಮ್ಮದ್ ಸಿರಾಜ್ ಇತ್ತೀಚೆಗೆ ತವರಿನಲ್ಲಿ ನಡೆದ ಏಕದಿನ ಸರಣಿಯಲ್ಲಿ ವಿಶ್ರಾಂತಿ ನೀಡಲಾಗಿತ್ತು. ಇದೀಗ ಏಕದಿನ ಸರಣಿ ಮೂಲಕ ತಂಡಕ್ಕೆ ವಾಪಸ್ ಆಗಿದ್ದಾರೆ.
ಕಳೆದ ನವೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಚೆಂಡು ಹಿಡಿಯಲು ಹೋಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಶ್ರೇಯಸ್ ಅಯ್ಯರ್ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ್ದಾರೆ. ಸದ್ಯ ದೇಸಿ ಟೂರ್ನಿ ವಿಜಯ್ ಹಜಾರೆ ಆಡುತ್ತಿರುವ ಮುಂಬೈ ಬ್ಯಾಟರ್ ಫಿಟ್ನೆಸ್ ಸಾಬೀತುಪಡಿಸಬೇಕಿದೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಒಂದು ಪಂದ್ಯದಲ್ಲಿ 10 ಓವರ್ ಹಾಕುವ ಕುರಿತು ಸೆಂಟರ್ ಆಫ್ ಎಕ್ಸೆಲೆನ್ಸ್ ಇನ್ನು ಅನುಮತಿ ನೀಡಿಲ್ಲ. ಹೀಗಾಗಿ ಆಯ್ಕೆದಾರರು ಏಕದಿನ ಸರಣಿಯಿಂದ ಹಾರ್ದಿಕ್ ಪಾಂಡ್ಯ ಅವರನ್ನು ಕೈಬಿಟ್ಟಿದೆ.
ದ.ಆಫ್ರಿಕಾ ವಿರುದ್ಧ ಕೋಲ್ಕತ್ತ ಟೆಸ್ಟ್ ಪಂದ್ಯದ ವೇಳೆ ಕುತ್ತಿಗೆಗೆ ಗಾಯಮಾಡಿಕೊಂಡು ತಂಡದಿಂದ ಹೊರಗುಳಿದಿದ್ದ ನಾಯಕ ಶುಭಮನ್ ಗಿಲ್ ಈ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಮಾಜಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ವಿಕೆಟ್ ಕೀಪರ್‌ಗಳಾಗಿ ಕೆ.ಎಲ್. ರಾಹುಲ್ ಮತ್ತು ರಿಷಭ್ ಪಂತ್ ಸ್ಥಾನ ಪಡೆದಿದ್ದಾರೆ.
ಆಲ್‌ರೌಂಡರ್‌ಗಳ ವಿಭಾಗದಲ್ಲಿ ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಇದ್ದಾರೆ. ಕುಲ್ದೀಪ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿರುವ ಏಕೈಕ ಸ್ಪಿನ್ನರ್ ಆಗಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಮೊಹ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಪ್ರಸಿದ್ಧ ಕೃಷ್ಣ ಹಾಗೂ ಹರ್ಷಿತ್ ರಾಣಾ ತಂಡದಲ್ಲಿದ್ದಾರೆ. ವಿಜಯ್ ಹಜಾರೆ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಹೊರತಾಗಿಯೂ ಸಂಜು ಸ್ಯಾಮ್ಸನ್, ಸರ್ಫಾರಾಜ್ ಖಾನ್, ದೇವದತ್ ಪಡಿಕ್ಕಲ್, ಮೊಹ್ಮದ್ ಶಮಿ ಮತ್ತು ಅಕ್ಷರ್ ಪಟೇಲ್ ತಂಡದಲ್ಲಿ ಸ್ಥಾನ ಪಡೆದಿಲ್ಲ.
ಭಾರತ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹ್ಮದ್ ಸೀರಾಜ್, ಹರ್ಷಿತ್ ರಾಣಾ, ಪ್ರಸಿದ್ಧ ಕೃಷ್ಣ, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್.























