ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಆಂಧ್ರಪ್ರದೇಶ ಹಾಗೂ ದೆಹಲಿ ನಡುವಿನ ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯವನ್ನು ನಡೆಸಲು ರಾಜ್ಯ ಗೃಹ ಇಲಾಖೆ ಅನುಮತಿ ನಿರಾಕರಿಸಿದೆ. ಈ ಪಂದ್ಯದಲ್ಲಿ ದೆಹಲಿ ತಂಡದ ಪರವಾಗಿ ಮಾಜಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಡಲಿರುವ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ಸಾಧ್ಯತೆ ಇದ್ದು, ಭದ್ರತಾ ಸವಾಲು ಎದುರಾಗಲಿದೆ ಎಂಬ ಕಾರಣವನ್ನು ಮುಂದಿಟ್ಟು ಪಂದ್ಯಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ತಿಳಿಸಿದೆ.
ಈಗಾಗಲೇ ಪ್ರಕಟಗೊಂಡಿದ್ದ ವಿಜಯ್ ಹಜಾರೆ ಟ್ರೋಫಿ ಶೆಡ್ಯೂಲ್ ಪ್ರಕಾರ ಡಿಸೆಂಬರ್ 24ರಂದು ಬೆಳಿಗ್ಗೆ 9 ಗಂಟೆಗೆ ಈ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಬೇಕಿತ್ತು. ಆದರೆ, ಇದೇ ವರ್ಷದ ಜೂನ್ ತಿಂಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವದ ವೇಳೆ ನಡೆದ ಭೀಕರ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಾವಳಿಗಳನ್ನು ನಡೆಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಅತ್ಯಂತ ಎಚ್ಚರಿಕೆ ವಹಿಸಿದೆ.
ಇದನ್ನೂ ಓದಿ: ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರದಾನ : ಕ್ರೀಡಾಕ್ಷೇತ್ರಕ್ಕೆ ಸರ್ಕಾರದ ಬಲವಾದ ಬೆಂಬಲ – ಸಿಎಂ ಸಿದ್ದರಾಮಯ್ಯ
ಪರಿಸ್ಥಿತಿ ಕೆಲವಷ್ಟು ಸುಧಾರಣೆಯಾಗಿದೆ ಎಂಬ ಹಿನ್ನೆಲೆಯಲ್ಲಿ ಇತ್ತೀಚೆಗೆ ಸರ್ಕಾರ ಷರತ್ತುಬದ್ಧ ಅನುಮತಿಯನ್ನು ನೀಡಿತ್ತು. ಇದರ ಬೆನ್ನಲ್ಲೇ ವಿಜಯ್ ಹಜಾರೆ ಟ್ರೋಫಿ ವೇಳಾಪಟ್ಟಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೂ ಕೆಲವು ಪಂದ್ಯಗಳನ್ನು ಆಯೋಜಿಸಲಾಗಿತ್ತು. ಆದರೆ, ಡಿಸೆಂಬರ್ 24ರಂದು ನಡೆಯಬೇಕಿದ್ದ ಆಂಧ್ರಪ್ರದೇಶ – ದೆಹಲಿ ನಡುವಿನ ಪಂದ್ಯಕ್ಕೆ ಮಾತ್ರ ಸರ್ಕಾರ ಅನುಮತಿ ನೀಡಿಲ್ಲ.
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಕ್ರೀಡಾಂಗಣದತ್ತ ಹರಿದುಬರುವ ಸಾಧ್ಯತೆ ಇದೆ. ಜೂನ್ ತಿಂಗಳಲ್ಲಿ ನಡೆದಂತಹ ದುರ್ಘಟನೆ ಮರುಕಳಿಸಬಾರದು ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ಪಂದ್ಯವನ್ನು ನಡೆಸದಂತೆ ಸರ್ಕಾರ ಹಾಗೂ ಬೆಂಗಳೂರು ಪೊಲೀಸರು ಕೆಎಸ್‌ಸಿಎಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಉತ್ತರ ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್ ಕ್ರಾಂತಿಯ ಆರಂಭ: ನಿಮ್ಮೂರಲ್ಲೇ ಕನಸು ನನಸಾಗಿಸಿಕೊಳ್ಳಿ
ಪಂದ್ಯಕ್ಕೆ ಅನುಮತಿ ನೀಡುವ ಸಂಬಂಧ ಸೋಮವಾರ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಭದ್ರತೆ ಮತ್ತು ಮೂಲಸೌಕರ್ಯಗಳ ಪರಿಶೀಲನೆ ನಡೆಸಿದ್ದರು. ಪರಿಶೀಲನೆಯ ಬಳಿಕ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದ್ದು, ಅಂತಿಮವಾಗಿ ಬೆಂಗಳೂರು ಪೊಲೀಸರು ಪಂದ್ಯಕ್ಕೆ ಅನುಮತಿ ನಿರಾಕರಿಸುವ ನಿರ್ಧಾರ ಕೈಗೊಂಡಿದ್ದಾರೆ.
ದೇಶೀಯ ಏಕದಿನ ಕ್ರಿಕೆಟ್ ಟೂರ್ನಿಯಾಗಿರುವ ವಿಜಯ್ ಹಜಾರೆ ಟ್ರೋಫಿ ಡಿಸೆಂಬರ್ 24ರಿಂದ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ಟೀಂ ಇಂಡಿಯಾದ ಮಾಜಿ ನಾಯಕರುಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಹಲವು ವರ್ಷಗಳ ಬಳಿಕ ಕಣಕ್ಕಿಳಿಯುತ್ತಿರುವುದರಿಂದ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿದೆ. ರೋಹಿತ್ ಶರ್ಮಾ ಏಳು ವರ್ಷಗಳ ನಂತರ ಹಾಗೂ ವಿರಾಟ್ ಕೊಹ್ಲಿ ಸುಮಾರು 15 ವರ್ಷಗಳ ಬಳಿಕ ವಿಜಯ್ ಹಜಾರೆ ಟ್ರೋಫಿಗೆ ಮರಳುತ್ತಿರುವುದು ಈ ಬಾರಿ ಟೂರ್ನಿಗೆ ವಿಶೇಷ ಆಕರ್ಷಣೆಯಾಗಿದೆ.























