ಹಿಂಜಾವೇ ಮುಖಂಡ ಸತೀಶ ಪೂಜಾರಿಗೆ ಉಡುಪಿ ಜಿಲ್ಲಾ ಪ್ರವೇಶ ನಿರ್ಬಂಧ

ಉಡುಪಿ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತ ಕಾಪಾಡುವ ನಿಟ್ಟಿನಲ್ಲಿ ದಾವಣಗೆರೆ ನಿವಾಸಿ ರೌಡಿಶೀಟರ್ ಸತೀಶ್ ಪೂಜಾರಿಗೆ ಜು. 7ರಿಂದ ಸೆ. 7ರ ವರೆಗೆ 2 ತಿಂಗಳ ಕಾಲ ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ.
ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲೆ ವತಿಯಿಂದ ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಕಾರ್ಕಳ, ಕುಂದಾಪುರ ಹಾಗೂ ಉಡುಪಿ ತಾಲೂಕಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಜು. 7ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆಯುವ ಸಭೆಗೆ ಪ್ರಮುಖ ಭಾಷಣಕಾರರನ್ನಾಗಿ ಸತೀಶ್ ಪೂಜಾರಿಯನ್ನು ಕರೆಯುವ ಸಿದ್ಧತೆ ನಡೆಸಲಾಗಿದೆ.

ಪ್ರಚೋದನಾಕಾರಿ ಭಾಷಣ ಮಾಡಿ ಗಲಾಬೆ ಎಬ್ಬಿಸುವ ಹುನ್ನಾರದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಸತೀಶ್‌ ಪೂಜಾರಿ ವಿರುದ್ಧ ರಾಜ್ಯದ ವಿವಿಧ ಪೊಲೀಸ್‌ ಠಾಣೆಯಲ್ಲಿ ಒಟ್ಟು 19 ಪ್ರಕರಣಗಳು ದಾಖಲಾಗಿವೆ.

ಉಡುಪಿ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರದಿ ಆಧರಿಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.